ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ: ನಿಗಮಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯ
ಕಾರವಾರ: ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಒತ್ತು ನೀಡಿದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳಿಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ತೋರುತ್ತಿದೆ ಎಂದು ಆರೋಪಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸಿದ್ದರಾಮಯ್ಯನವರ ನೇತ್ರತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನುದಾನ ಬಿಡುಗಡೆಯನ್ನು ಬಹುತೇಕ ಸ್ಥಗಿತಗೊಳಿಸಿದ್ದು, ನೆಪಮಾತ್ರಕ್ಕೆ ಎನ್ನುವಂತೆ ಬಜೆಟ್‌ನಲ್ಲಿ ಘೋಷಿಸುವ ಮೊತ್ತಕ್ಕೂ, ವಾಸ್ತವಾಗಿ ಬಿಡುಗಡೆ ಮಾಡುವ ಮೊತ್ತಕ್ಕೂ, ಅಜಗಜಾಂತರ ವ್ಯತ್ಯಾಸವಿದೆ. ಇದರಿಂದ ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳು ಹಾಗೂ ಇತರ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳು ಅನುದಾನದ ಕೊರತೆಯಿಂದ ಯಾವುದೇ ಯೋಜನೆ ಸಿಗದೇ ಉಳಿಯುವಂತಾಗಿದೆ.
ಈ ಹಿಂದಿನ ಸರ್ಕಾರದಲ್ಲಿ ದೇವರಾಜ ಅರಸ ಅಭಿವೃದ್ಧಿ ನಿಗಮದಲ್ಲಿ ಪಡೆಯುತ್ತಿದ್ದ ಸ್ವ-ಉದ್ಯೋಗ ಯೋಜನೆ, ವಿದ್ಯಾರ್ಥಿಗಳಿಗಾಗಿ ಅರಿವು ಯೋಜನೆ ಹಾಗೂ ಸಣ್ಣ ಹಿಡುವಳಿದಾರ ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗುತ್ತಿದ್ದ ಉಚಿತ ಬೋರ್‌ವೆಲ್ ಯೋಜನೆ ಬಹುತೇಕ ಸ್ಥಗಿತಗೊಂಡಿದ್ದು, ಕಾಂಗ್ರೆಸ್ ಸರ್ಕಾರ ತಮ್ಮ ಪಂಚಭಾಗ್ಯ ಯೋಜನೆಯ ಅನುಷ್ಠಾನಕ್ಕಾಗಿ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ಕೆ ವಿನಿಯೋಗವಾಗಬೇಕಿದ್ದ ಹಣವನ್ನು ಬಳಕೆ ಮಾಡಿಕೊಳ್ಳುತ್ತಿದೆ.
ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಬಜೆಟ್‌ನಲ್ಲಿ ಘೋಷಿಸಿದಂತೆ 546 ಕೋಟಿ ರೂಪಾಯಿ ಅನುದಾನ ಬಿಡುಗಡೆ ಆದರೆ, 2023 ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತ್ರತ್ವದ ಕಾಂಗ್ರೆಸ್ ಸರ್ಕಾರ ಈ ನಿಗಮಗಳಿಗೆ ಕೇವಲ 170 ಕೋಟಿ ರೂಪಾಯಿ ಬಿಡುಗಡೆ ಮಾಡಿ ಕೈತೊಳೆದು ಕೊಂಡಿದೆ.
ಅಲ್ಲದೆ ಪ್ರಸಕ್ತ ಬಜೆಟ್‌ನಲ್ಲಿ 1600/- ರೂ. ಅನುದಾನ ಘೋಷಿಸಿ ಕೇವಲ 347 ಕೋಟಿ ರೂಪಾಯಿ ಅನುದಾನ ಮಾತ್ರ ಬಿಡುಗಡೆ ಮಾಡಿ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡಿದೆ. ರಾಜ್ಯದಲ್ಲಿ 58% ರಷ್ಟು ಹಿಂದುಳಿದ ಸಮುದಾಯದ ಎಲ್ಲಾ ಜನರಿದ್ದಾರೆ.
ಹೀಗಾಗಿ ಸರ್ಕಾರವು ಈ ನಿಗಮ ಮಂಡಳಿಗೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.