ಕಾರವಾರ: ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರನ್ನು ಮಾಜಾಳಿ ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ, ಗೋವಾ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಶನಿವಾರ ಮಧ್ಯಾಹ್ನ ಮಾಜಾಳಿ ಅಬಕಾರಿ ತನಿಖಾ ಠಾಣೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಗೋವಾದಿಂದ ಕಾರವಾರದತ್ತ ಬರುತ್ತಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರನ್ನು ತಡೆದು ಪರಿಶೀಲಿಸಲಾಯಿತು. ಈ ವೇಳೆ ಕಾರಿನ ಬಾನೆಟ್ನಲ್ಲಿ ಅಡಗಿಸಿಟ್ಟಿದ್ದ 28.750 ಲೀಟರ್ ಗೋವಾ ಮದ್ಯ ಹಾಗೂ 2.320 ಲೀಟರ್ ಬಿಯರ್ ಪತ್ತೆಯಾಗಿದೆ.
ಈ ಸಂಬಂಧ ಗೋವಾದ ಕಾಣಕೋಣ ತಾಲೂಕಿನ ಪೋಲೆಮ್, ಲೋಲೆಮ್ ನಿವಾಸಿ ದೀಪಕ ಪಾಗಿ ಎಂಬಾತನನ್ನು ಬಂಧಿಸಲಾಗಿದ್ದು, ಮದ್ಯದೊಂದಿಗೆ ಕಾರನ್ನು ಜಪ್ತಿ ಮಾಡಲಾಗಿದೆ. ಕಾರವಾರ ಉಪವಿಭಾಗದ ಅಬಕಾರಿ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದೆಡೆ, ಕಾರವಾರ ತಾಲೂಕಿನ ಮುಡಗೇರಿಯ ಅರಣ್ಯ ಪ್ರದೇಶದಲ್ಲಿ ಅಕ್ಟೋಬರ್ 6ರಂದು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 179.640 ಲೀಟರ್ ಗೋವಾ ಮದ್ಯ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಮದ್ಯದ ಮೌಲ್ಯ 98,400 ರೂ. ಹಾಗೂ ವಾಹನಗಳ ಮೌಲ್ಯ 80,000 ರೂ. ಎಂದು ಅಬಕಾರಿ ಇಲಾಖೆ ತಿಳಿಸಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು ಹಾಗೂ ಉತ್ತರ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ, ಕಾರವಾರ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.


